ಕೊಪ್ಪಳ ಬಿಜೆಪಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಾ. ಕೆ. ಬಸವರಾಜ ಶುಕ್ರವಾರ ಶಕ್ತಿ ದೇವತೆ ಶ್ರೀ ಹುಲಿಗೆಮ್ಮದೇವಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕರ್ನಾಟಕವಲ್ಲದೆ ನೆರೆರಾಜ್ಯಗಳಿಂದ ಭಕ್ತರು ಹುಲಿಗೆಮ್ಮದೇವಿಯ ದರ್ಶನಕ್ಕೆ ಆಗಮಿಸುತ್ತಾರೆ. ಶ್ರೀಕ್ಷೇತ್ರ ರಾಜ್ಯ ಸರ್ಕಾರಕ್ಕೆ ನೂರಾರು ಕೋಟಿ ರೂ. ಆದಾಯ ತರುತ್ತಿದೆ. ಆದರೆ, ನಿರೀಕ್ಷಿತ ಮಟ್ಟದಲ್ಲಿ ಅಭಿವೃದ್ಧಿ ಆಗಿಲ್ಲ. ಕಳೆದ ಅಧಿವೇಶನದಲ್ಲಿ ಹುಲಿಗೆಮ್ಮ ಅಭಿವೃದ್ಧಿ ಪ್ರಾಧಿಕಾರ ರಚಿಸಲಾಗಿದೆ. ಆದರೆ, ಅಭಿವೃದ್ಧಿ ರೂಪುರೇಷೆ ಇನ್ನೂ ಸಿದ್ಧವಾಗಿಲ್ಲ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ, ಹುಲಿಗೆಮ್ಮ ದೇವಸ್ಥಾನ ಅಭಿವೃದ್ಧಿಗೆ ವಿಶೇಷ ಅನುದಾನ ತಂದು ಅಭಿವೃದ್ಧಿ ಪಡಿಸುವೆ ಎಂದರು.
ಭಕ್ತರ ಸಂಖ್ಯೆಗೆ ಅನುಗುಣವಾಗಿ ಮೂಲಸೌಕರ್ಯ ಅಭಿವೃದ್ಧಿ ಮಾಡುವ ಸಂಕಲ್ಪ ಮಾಡಿದ್ದೇನೆ. ಹುಲಿಗೆಮ್ಮದೇವಿಯ ಆಶೀರ್ವಾದ, ಜನರ ಸಹಕಾರ ಅಗತ್ಯ ಎಂದರು.
ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರು, ಕಾರ್ಯಕರ್ತರು ಜೊತೆಗಿದ್ದರು.